ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳಿಗೆ ಚುನಾವಣೆಯು 2025ರ ಆಗಸ್ಟ್ 7 ರಂದು ಮಧ್ಯಾಹ್ನ 12.30 ಗಂಟೆಗೆ ಕಲಬುರಗಿ ಮಹಾನಗರಪಾಲಿಕೆಯ ಇಂದಿರಾ ಸ್ಮಾರಕ ಭವನ (ಟೌನ್‍ಹಾಲ್)ದಲ್ಲಿ ಜರುಗಲಿದೆ ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು ತಿಳಿಸಿದ್ದಾರೆ.
ಮಹಾನಗರ ಪಾಲಿಕೆಯ ಮೇಯರ್ ಸ್ಥಾನವು “ಸಾಮಾನ್ಯ (ಮಹಿಳೆ)” ವರ್ಗಕ್ಕೆ ಹಾಗೂ ಉಪ ಮೇಯರ್ ಸ್ಥಾನವು “ಹಿಂದುಳಿದ ವರ್ಗ (ಬ)”ಕ್ಕೆ ಮೀಸಲಿಡಲಾಗಿದೆ. ನಾಲ್ಕು ಸ್ಥಾಯಿ ಸಮಿತಿಗಳಾದ ತೆರಿಗೆ ನಿರ್ಧರಣೆ ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ ಹಾಗೂ ಲೆಕ್ಕಪತ್ರ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗಾಗಿಯೂ ಇದೇ ಸಂದರ್ಭದಲ್ಲಿ ಚುನಾವಣೆ ಜರುಗಲಿದೆ.