ಕಲಬುರಗಿ: ಕಲ್ಯಾಣ ನಾಡಿನ ಪ್ರಸಿದ್ಧ ಮಹಾದಾಸೋಹಿ, ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪ (90) ಅವರು ಗುರುವಾರ ಸಂಜೆ ವಿಧಿವಶರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಅವರು ಲಿಂಗೈಕ್ಯರಾಗಿದ್ದಾರೆ.
ಕಲಬುರಗಿಯ ಶ್ರೀ ಶರಣಬಸವೇಶ್ವರ ಸಂಸ್ಥಾನವು ಅನಾದಿಕಾಲದಿಂದಲೂ ದಾಸೋಹ ಪರಂಪರೆಯನ್ನು ಮುಂದುವರಿಸಿಕೊಂಡು ಬರುತ್ತಿದೆ. ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರು ದಾಸೋಹದ ಜತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಯೂ ಮಾಡಿದ ಖ್ಯಾತಿಯನ್ನು ಅವರು ಪಡೆದಿದ್ದಾರೆ. ವಿದ್ಯಾಭಂಡಾರಿ ಸೇರಿದಂತೆ ಹಲವು ಬಿರುದುಗಳನ್ನು ಅವರು ಪಡೆದುಕೊಂಡಿದ್ದರು.
ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರ ಅಂತಿಮ ವಿಧಿ ವಿಧಾನವನ್ನು ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.