ಕಲಬುರಗಿ: ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ತನ್ನ ಮಾತನ್ನು ಉಳಿಸಿಕೊಂಡಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಮಹಿಳಾ ಸಬಲೀಕರಣವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಮಹಿಳಾ ಘಟಕದ ನೂತನ ಜಿಲ್ಲಾಧ್ಯಕ್ಷೆ ರೇಣುಕಾ ಸಿಂಗೆ ಅವರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಗ್ಯಾರಂಟಿ ಯೋಜನೆಗಳಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಜನರ ಆರ್ಥಿಕ ಸ್ಥಿತಿಗತಿ ಸುಧಾರಿಸಿದೆ. ಇದು ನಮ್ಮ ಸರ್ಕಾರದ ಬದ್ದತೆಯಾಗಿದೆ ಎಂದ ಪ್ರಿಯಾಂಕ್ ಖರ್ಗೆ, ಸರ್ಕಾರದ ಸಾಧನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದು ಮಹಿಳಾ ಘಟಕದ ಸದಸ್ಯರಿಗೆ ಕರೆ ನೀಡಿದರು.
ಮಹಿಳಾ ಘಟಕದ ರಾಜ್ಯಾದ್ಯಕ್ಷೆ ಸೌಮ್ಯಾರೆಡ್ಡಿ ಅವರ ತಂದೆ ಸಚಿವ ರಾಮಲಿಂಗಾರೆಡ್ಡಿ ಅವರಂತೆ ಹೋರಾಟ ಸ್ವಭಾವದವರಾಗಿದ್ದು ನಮ್ಮಗೆಲ್ಲ ಸ್ಪೂರ್ತಿದಾಯಕರಾಗಿದ್ದಾರೆ. ನಾವು ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡುತ್ತಿರುವುದಕ್ಕೆ ಅವರ ಸ್ಪೂರ್ತಿದಾಯಕ ಮಾತುಗಳು ಕೂಡಾ ಕಾರಣವಾಗಿವೆ. ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ ಎಂದರು.
ನೂತನವಾಗಿ ಅಧ್ಯಕ್ಷೆ ಯಾಗಿ ಪದಗ್ರಹಣ ಮಾಡಿದ ರೇಣುಕಾ ಸಿಂಗೆ ಪಕ್ಷದ ಎಲ್ಲ ಮಹಿಳಾ ಕಾರ್ಯಕರ್ತರೊಂದಿಗೆ ಒಗ್ಗಟ್ಟಿನಿಂದ ಜೊತೆಗೂಡಿ ಪಕ್ಷದ ಹಾಗೂ ಸರ್ಕಾರದ ಪರವಾಗಿ ಕೆಲಸ ಮಾಡಬೇಕು ಎಂದು ಸಚಿವರು ಕಿವಿ ಮಾತು ಹೇಳಿದರು.
ಮಹಿಳಾ ಘಟಕದ ರಾಜ್ಯಾದ್ಯಕ್ಷೆ ಸೌಮ್ಯಾರೆಡ್ಡಿ ಮಾತನಾಡಿ ಈ ಭಾಗದ ಧೀಮಂತ ನಾಯಕ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ ಹಾಗೂ ಸಿಎಂ ಸಿದ್ಧ ರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ತನ್ನ ಜನಪರ ಯೋಜನೆಗಳೊಂದಿಗೆ ಯಶಸ್ವಿ ಆಡಳಿತ ನಡೆಸುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳ ಮೂಲಕ ಸರ್ಕಾರ ಮಹಿಳಾ ಸಬಲೀಕರಣ ಜೊತೆಗೆ ಲಕ್ಷಾಂತರ ಕುಟುಂಬಗಳ ಆರ್ಥಿಕ ಸ್ಥಿತಿ ಗಣನೀಯವಾಗಿ ಸುಧಾರಣೆ ಮಾಡಿದೆ.
ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಖರ್ಗೆ ಸಾಹೇಬರ ಒತ್ತಾಸೆ ಹಾಗೂ ದೂರದೃಷ್ಟಿಯಿಂದಾಗಿ ಸಂವಿಧಾನದ ಕಲಂ 371 ಕ್ಕೆ ತಿದ್ದುಪಡಿ ತರಲಾಗಿದೆ. ಇದರಿಂದಾಗಿ ಈ ಭಾಗದ ಸಮಗ್ರ ಅಭಿವೃದ್ದಿಗೆ ಅನುಕೂಲವಾಗಿದೆ ಎಂದರು.
ಪದಗ್ರಹಣ ಮಾಡಿದ ರೇಣುಕಾ ಸಿಂಗೆ ಮಾತನಾಡಿ, ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಧಾಕೃಷ್ಣ ದೊಡ್ಡಮನಿ, ಡಾ ಶರಣಪ್ರಕಾಶ ಪಾಟೀಲ್, ಪ್ರಿಯಾಂಕ್ ಖರ್ಗೆ, ಹಾಗೂ ಸೌಮ್ಯಾರೆಡ್ಡಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸ ಮಾಡುವುದರ ಜೊತೆಗೆ ಪಕ್ಷದ ಎಲ್ಲ ಮಹಿಳಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸೌಮ್ಯಾರೆಡ್ಡಿ ಪಕ್ಷದ ಧ್ವಜವನ್ನು ರೇಣುಕಾಸಿಂಗೆ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಎಂಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಜಗದೇವ ಗುತ್ತೇದಾರ್, ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್ ಸೇರಿದಂತೆ ಇತರರಿದ್ದರು.