ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಆಳಂದ ಶಾಸಕ ಬಿ.ಆರ್ ಪಾಟೀಲ್ ಅವರು ಬುಧವಾರ ರಾಜೀನಾಮೆ ಸಲ್ಲಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಬಿ.ಆರ್ ಪಾಟೀಲ್, ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಾವು ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುಳ್ಳು ಹಾಗೂ ದಾರಿತಪ್ಪಿಸುವ ಸುದ್ದಿಗಳು ಕೆಲವು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವುದು ಗಮನಕ್ಕೆ ಬಂದಿದ್ದು, ಆ ಸುದ್ದಿಗಳಿಗೆ ಯಾವುದೇ ಸತ್ಯಾಂಶವಿಲ್ಲ ಎಂದು ಅವರು ತಿಳಿಸಿದ್ದಾರೆ.
“ನನ್ನ ಕ್ಷೇತ್ರದ ಜನತೆಯ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದದಿಂದ ನಾನು ಶಾಸಕನಾಗಿ ಆಯ್ಕೆಯಾಗಿದ್ದೇನೆ. ಶಾಸಕ ಸ್ಥಾನವು ನನಗೆ ದೊರೆತಿರುವ ಹುದ್ದೆಯಲ್ಲ; ಅದು ಜನತೆ ನನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ಜವಾಬ್ದಾರಿಯ ಸಂಕೇತವಾಗಿದೆ. ಆ ಜನಾದೇಶಕ್ಕೆ ದ್ರೋಹ ಮಾಡುವ ಪ್ರಶ್ನೆಯೇ ಇಲ್ಲ. ನನ್ನನ್ನು ಗೆಲ್ಲಿಸಿದ ಜನರ ಆಶಯಗಳನ್ನು ಈಡೇರಿಸುವುದೇ ನನ್ನ ಮೊದಲ ಆದ್ಯತೆ. ಸಚಿವ ಸ್ಥಾನ ಇರಲಿ ಅಥವಾ ಇಲ್ಲದಿರಲಿ, ನಾನು ನನ್ನ ಕ್ಷೇತ್ರದ ಜನರ ಸೇವೆಗೆ ಸದಾ ಬದ್ಧನಾಗಿದ್ದೇನೆ,” ಎಂದು ಅವರು ಹೇಳಿದ್ದಾರೆ.
ಸಚಿವ ಸ್ಥಾನ ದೊರಕದಿರುವುದು ಸಹಜವಾಗಿಯೇ ನೋವು ಮತ್ತು ಅಸಮಾಧಾನ ಉಂಟುಮಾಡಿದರೂ, ಕಳೆದ ಐದು ದಶಕಗಳ ತಮ್ಮ ರಾಜಕೀಯ ಜೀವನದಲ್ಲಿ ಹುದ್ದೆಗಿಂತ ಪಕ್ಷ, ವೈಯಕ್ತಿಕ ಹಿತಾಸಕ್ತಿಗಿಂತ ತತ್ವ ಮತ್ತು ಸಿದ್ಧಾಂತಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ.
“ಪಕ್ಷದ ಮೇಲಿನ ನನ್ನ ನಿಷ್ಠೆ ಅಚಲವಾಗಿದೆ. ಸಮಾಜವಾದಿ ಮೌಲ್ಯಗಳು ಮತ್ತು ಸಾಮಾಜಿಕ ನ್ಯಾಯದ ಪರವಾದ ನನ್ನ ಬದ್ಧತೆ ಎಂದಿಗೂ ಬದಲಾಗುವುದಿಲ್ಲ,” ಎಂದು ಅವರು ಪುನರುಚ್ಚರಿಸಿದ್ದಾರೆ.
ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹರಡುತ್ತಿರುವ ಸುಳ್ಳು ಸುದ್ದಿಗಳನ್ನು ಯಾರೂ ನಂಬಬಾರದು ಎಂದು ಮನವಿ ಮಾಡಿದ ಅವರು, ಮಾಧ್ಯಮಗಳು ಕೂಡ ವಾಸ್ತವಾಂಶಗಳನ್ನು ಪರಿಶೀಲಿಸಿ ಮಾತ್ರ ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಜನತೆಗೆ ನಿಖರ ಮಾಹಿತಿ ತಲುಪಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ವಿನಂತಿಸಿದ್ದಾರೆ.


