5.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಬೈಕ್ ಜಪ್ತಿ
ಕಲಬುರಗಿ: ರಟಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೆಂಗಟಾ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮೂವರು ಆರೋಪಿಗಳನ್ನು ವಶಕ್ಕೆ ಪಡೆದು, ಸುಮಾರು 5.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಚೆಂಗಟಾ ಗ್ರಾಮದ ರವಿಪ್ರಕಾಶ ಹಜೇಪ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕುಟುಂಬ ಸಮೇತ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ, ಆಗಸ್ಟ್ 29ರ ರಾತ್ರಿ ಅವರ ಮನೆಯ ಅಲಮಾರಿಯಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳ್ಳರು ಕಳವು ಮಾಡಿದ್ದರು. ಕಳವಾದ ಆಭರಣಗಳ ಒಟ್ಟು ಮೌಲ್ಯ ಸುಮಾರು 11.71 ಲಕ್ಷ ರೂ. ಎಂದು ಅಂದಾಜಿಸಲಾಗಿತ್ತು. ಈ ಕುರಿತು ಆಗಸ್ಟ್ 31ರಂದು ನೀಡಿದ ದೂರಿನ ಆಧಾರದ ಮೇಲೆ ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಪತ್ತೆಗಾಗಿ ಚಿಂಚೋಳಿ ಡಿವೈಎಸ್‌ಪಿ ಅವರ ಮಾರ್ಗದರ್ಶನದಲ್ಲಿ ಸುಲೇಪೇಟ ಸಿಪಿಐ ಕೃಷ್ಣಕುಮಾರ ಹಾಗೂ ರಟಕಲ್ ಪಿಎಸ್‌ಐ ಶೀಲಾದೇವಿ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ತಂಡವು ಅಕ್ಟೋಬರ್ 22ರಂದು ಕಾಳಗಿ ಪಟ್ಟಣದ ಶೇರ್ ಆಲಿ (31), ಅಬ್ದುಲ್ ವಾಜೀದ್ (22) ಹಾಗೂ ಈರ್ಫಾನ್ ಸಾಬ್ (30) ಎಂಬುವರನ್ನು ವಶಕ್ಕೆ ಪಡೆದುಕೊಂಡಿದೆ.
ಆರೋಪಿತರಿಂದ 33 ಗ್ರಾಂ ಚಿನ್ನ, 30 ಗ್ರಾಂ ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಜಪ್ತಿ ಮಾಡಿದ ವಸ್ತುಗಳ ಒಟ್ಟು ಅಂದಾಜು ಮೌಲ್ಯ 5.50 ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


