ಕಲಬುರಗಿ| ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ; ಕ್ರೀಡೆಗಳಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್

Date:

Share post:

ಕಲಬುರಗಿ: ಪೊಲೀಸ್ ಸಿಬ್ಬಂದಿಯ ದೈನಂದಿನ ಕರ್ತವ್ಯದ ಒತ್ತಡದ ನಡುವೆ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತವೆ. ಕ್ರೀಡೆಗಳು ವ್ಯಕ್ತಿಯಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವವನ್ನು ಬೆಳೆಸುತ್ತವೆ ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಹೇಳಿದರು.

ಬುಧವಾರ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆಯ ಸಿಬ್ಬಂದಿ ಹಗಲಿರುಳು ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಸಾರ್ವಜನಿಕರ ಸುರಕ್ಷತೆ ಖಚಿತಪಡಿಸುವುದು ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸುತ್ತಾರೆ. ಇಂತಹ ಕಾರ್ಯದೊತ್ತಡದ ನಡುವೆಯೂ ಕ್ರೀಡಾಕೂಟ ಆಯೋಜಿಸಿ ಸಿಬ್ಬಂದಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ಕ್ರೀಡೆಗಳು ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ಆರೋಗ್ಯಕರ ಜೀವನಶೈಲಿಗೆ ಪ್ರೇರಣೆ ನೀಡುವುದರ ಜತೆಗೆ ಪರಸ್ಪರ ಸಹಕಾರ, ಸ್ನೇಹ ಮತ್ತು ಒಗ್ಗಟ್ಟಿನ ಭಾವನೆಯನ್ನು ಗಟ್ಟಿಗೊಳಿಸುತ್ತವೆ. ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ವ್ಯಾಯಾಮ ಹಾಗೂ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ದೈಹಿಕ ಸಾಮರ್ಥ್ಯ ವೃದ್ಧಿಯಾಗುವುದರ ಜತೆಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸುವವರು ಗೆಲುವನ್ನೇ ಗುರಿಯಾಗಿಸಿಕೊಳ್ಳದೆ ಕ್ರೀಡಾ ಮನೋಭಾವದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು. ಗೆಲುವು ಸಾಧಿಸಿದವರು ಮತ್ತಷ್ಟು ಸಾಧನೆಗೆ ಪ್ರಯತ್ನಿಸಬೇಕು. ಸೋತವರು ನಿರಾಶರಾಗದೆ ಮುಂದಿನ ಸ್ಪರ್ಧೆಗಳಿಗೆ ಹೆಚ್ಚಿನ ಸಿದ್ಧತೆ ಮಾಡಿಕೊಳ್ಳಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸುವುದೇ ಪ್ರಮುಖ ಸಾಧನೆಯಾಗಿದೆ ಎಂದು ಹೇಳಿದರು.

ಪೊಲೀಸ್ ಸಿಬ್ಬಂದಿಯಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಇಂತಹ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ. ಕ್ರೀಡೆಯ ಮೂಲಕ ಇಲಾಖೆಯಲ್ಲಿ ಪರಸ್ಪರ ಬಾಂಧವ್ಯ ಮತ್ತು ತಂಡದ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸಾಧ್ಯವಿದೆ ಎಂದರು.

ಕ್ರೀಡಾಕೂಟದ ಆರಂಭದಲ್ಲಿ ಐದು ತಂಡಗಳ ಕ್ರೀಡಾಪಟುಗಳು ಆಕರ್ಷಕ ಕವಾಯತು ನಡೆಸಿದರು. ಕ್ರೀಡಾಕೂಟದ ಅಂಗವಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಮಹಾನಗರ ಪಾಲಿಕೆ ಆಯುಕ್ತ ಪಿ. ಶ್ರವಣಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಡ್ಡೂರು ಶ್ರೀನಿವಾಸುಲು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣವರ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಅಡ್ಡೂರು ಶ್ರೀನಿವಾಸುಲು ಸ್ವಾಗತಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣವರ ವಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಕಾಂಗ್ರೆಸ್ ಅರಾಜಕತೆ ಸೃಷ್ಟಿಸಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ: ರಾಜನಾಥ್ ಸಿಂಗ್ ಕಿಡಿ

ಕಲಬುರಗಿ: ಕಾಂಗ್ರೆಸ್ ಪಕ್ಷ ಅರಾಜಕತೆ ಸೃಷ್ಟಿಸುವ ಮೂಲಕ ಅಧಿಕಾರಕ್ಕೆ ಮರಳುವ ಪ್ರಯತ್ನ...

ಕಲಬುರಗಿ| ಹಿರಾಪೂರ ಸರ್ಕಲ್‌ನಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ; 750ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ

ಕಲಬುರಗಿ: ನಗರದ ಹಿರಾಪೂರ ಸರ್ಕಲ್‌ನಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆಯ ಅಂಗವಾಗಿ ಸಂವಿಧಾನದ...

ಕಲಬುರಗಿ| 5 ಕೋಟಿ ರೂ.ವೆಚ್ಚದ ಮಾಡಿಯಾಳ-ದೇವಂತಗಿ ರಸ್ತೆ ಕಾಮಗಾರಿಗೆ ಶಾಸಕ ಬಿ.ಆರ್.ಪಾಟೀಲ್ ಚಾಲನೆ

ಕಲಬುರಗಿ: ಸಾರ್ವಜನಿಕ ಕೇಲಸ ನಿರ್ಮಾಣ ಮಾಡುವಾಗ ಯಾವುದೇ ಗುತ್ತಿಗೇದಾರರು ಜನಹಿತ ಗಮನದಲಿರಿಸಿ...

ಕಲಬುರಗಿ| ಶರಣಬಸವ ವಿವಿ ಕ್ರೀಡಾಕೂಟ: ಸೋಮೇಶ್ವರ, ರಮ್ಯಾ ಅತ್ಯಂತ ವೇಗದ ಓಟಗಾರರು

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ನಾಲ್ಕು ದಿನಗಳ ವಾರ್ಷಿಕ ಕ್ರೀಡಾಕೂಟದ 100 ಮೀಟರ್...