ಕಲಬುರಗಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಸಂಕಷ್ಟದಲ್ಲಿರುವ ರೈತರಿಗೆ ಬೆಂಬಲವಾಗಿ ನಿಂತಿರುವ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಇಂದು ಕಲಬುರಗಿ ಮತ್ತು ಅಫಜಲಪೂರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಮಾತನಾಡಿ ಖುದ್ದಾಗಿ ಬೆಳೆಹಾನಿಯನ್ನು ಪರಿಶೀಲಿಸಿದರು.
ಶನಿವಾರ ಬೆಳಿಗ್ಗೆ ಮೊದಲು ಕಲಬುರಗಿ ತಾಲ್ಲೂಕಿನ ಸಾವಳಗಿ (ಬಿ) ಗ್ರಾಮದಿಂದ ಪರಿಶೀಲನೆ ಆರಂಭಿಸಿದ ಅವರು ಹಡಗಿಲ ಹಾರುತಿ, ಮೇಳಕುಂದ (ಕೆ), ಮೇಳಕುಂದ (ಬಿ), ಮಾಚನಾಳ ತಾಂಡ ಸೇರಿದಂತೆ ಅಫಜಲಪೂರ ತಾಲ್ಲೂಕಿನ ಚೌಡಾಪುರ ಗ್ರಾಮಗಳಿಗೆ ಬೇಟಿ ನೀಡಿದರು.
ಕಳೆದ ಎರೆಡು-ಮೂರು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ತುಂಬಿ ಹರಿಯುತ್ತಿರುವ ಭೀಮಾ ನದಿ ಸೇರಿದಂತೆ ಜಿಲ್ಲೆಯಲ್ಲಿರುವ ವಿವಿಧ ಜಲಾಶಯಗಳಿಂದ ಸಹ ಹೆಚ್ಚಿನ ನೀರನ್ನು ಹೊರಬಿಡುತ್ತಿರುವ ಹಿನ್ನಲೆಯಲ್ಲಿ ವಿವಿಧ ತಾಲ್ಲೂಕಿನ ಅನೇಕ ಹಳ್ಳಿಗಳಲ್ಲಿ ಪ್ರವಾಹ ಭೀತಿ ಮತ್ತು ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರ ಬೆಳೆಗಳಿಗೆ ಸರ್ಕಾರದಿಂದ ಅಗತ್ಯ ನೆರವು ಒದಗಿಸಲು ಸಂಬಂಧಿತ ಸ್ಥಳೀಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಜಿಲ್ಲಾಧಿಕಾರಿಗಳು ಖುದ್ದಾಗಿ ಗ್ರಾಮಗಳಿಗೆ ಬೇಟಿ ನೀಡುವ ಮೂಲಕ ರೈತರೊಂದಿಗೆ ಮಾತನಾಡುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿದೇಶ ಪ್ರವಾಸದಲ್ಲಿದ್ದರೂ ಸಹ ಕಳೆದ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಲು ಹಾಗೂ ವೈಜ್ಞಾನಿಕವಾಗಿ ಬೆಳೆಹಾನಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದ್ದರು.
ತೊಗರಿ, ಹೆಸರು, ಹತ್ತಿ ಸೇರಿದಂತೆ ವಿವಿಧ ಬೆಳೆಗಳ ಹೊಲಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಬೆಳೆಹಾನಿ ಕುರಿತಂತೆ ವಿಸ್ಕøತ ವರದಿಯನ್ನು ತುರ್ತಾಗಿ ಜಿಲ್ಲಾಡಳಿತಕ್ಕೆ ಸಲ್ಲಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಹಾಯಕ ಆಯುಕ್ತರಾದ ಸಾಹಿತ್ಯ, ಕೃಷಿ ಇಲಾಖೆ ಉಪ ನಿರ್ದೇಶಕ ಸೋಮಶೇಖರ್, ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಸೇರಿದಂತೆ ಕಂದಾಯ ಇಲಾಖೆಯ ಕಲಬುರಗಿ ಮತ್ತು ಅಫಜಲಪೂರ ತಾಲ್ಲೂಕಿನ ತಹಸೀಲ್ದಾರರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


