ಕಲಬುರಗಿ: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ, ಕಬ್ಬಿಗೆ ನ್ಯಾಯಯುತ ಬೆಂಬಲ ಬೆಲೆ ಘೋಷಿಸಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳನ್ನು ಶೀಘ್ರ ಆರಂಭಿಸಬೇಕು. ಇಲ್ಲವಾದಲ್ಲಿ ನಾಲ್ಕು ದಿನಗಳ ಗಡುವಿನ ಬಳಿಕ ಉಗ್ರ ಹೋರಾಟ ಆರಂಭಿಸಲಾಗುವುದು ಎಂದು ಅಫಜಲಪುರ ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದೆ.
ಈ ಕುರಿತು ಅಫಜಲಪುರ ತಹಸೀಲ್ದಾರ್ ಸಂಜೀವಕುಮಾರ ದಾಸರ ಮೂಲಕ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ತಾಲೂಕಿನಲ್ಲಿ ಸುಮಾರು 60 ಸಾವಿರ ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆ ಬೆಳೆಯಲಾಗಿದ್ದು, ಮಳೆಯ ಕೊರತೆಯಿಂದ ಬೋರ್ವೆಲ್, ಬಾವಿ ಹಾಗೂ ಕಾಲುವೆಗಳು ಬತ್ತಿ ಹೋಗಿವೆ. ಇದರಿಂದ ಸುಮಾರು 20 ಸಾವಿರ ಎಕರೆ ಕಬ್ಬಿನ ಬೆಳೆ ಒಣಗಿ ನಾಶವಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದ ಅಗ್ನಿ ಅವಘಡಗಳಲ್ಲಿ ಸುಮಾರು 1,000 ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿಸಲಾಗಿದೆ.
ಜಿಲ್ಲೆಯ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಒಳಗೊಂಡ ತುರ್ತು ಸಭೆ ಕರೆದು ಕಬ್ಬಿಗೆ ನ್ಯಾಯಯುತ ಬೆಂಬಲ ಬೆಲೆ ಘೋಷಿಸಿ, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳನ್ನು ಕೂಡಲೇ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದಲ್ಲದೆ, ತಾಲೂಕಿನ ಎರಡು ಸಕ್ಕರೆ ಕಾರ್ಖಾನೆಗಳು ಭೀಮಾ ನದಿಯ ನೀರನ್ನು ಬಳಸುತ್ತಿದ್ದು, ಕುಡಿಯುವ ನೀರಿನ ತೀವ್ರ ಅಭಾವವಿರುವ ಸಂದರ್ಭದಲ್ಲಿ ಕೈಗಾರಿಕೆಗಳಿಗೆ ನೀರು ಪೂರೈಸುವುದನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.
ನಾಲ್ಕು ದಿನಗಳೊಳಗೆ ಸರ್ಕಾರ ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು.
ಈ ವೇಳೆ ಯಾವುದೇ ರೀತಿಯ ಅನಾಹುತ ಅಥವಾ ಕಾನೂನು-ಸುವ್ಯವಸ್ಥೆ ಸಮಸ್ಯೆ ಉಂಟಾದರೆ ಅದರ ಸಂಪೂರ್ಣ ಹೊಣೆ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ್ದೇ ಆಗಿರುತ್ತದೆ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಶ್ರೀಮಂತ ಬಿರಾದಾರ, ಗುರು ಚಾಂದಕವಟೆ ಹಾಗೂ ರಮೇಶ ಪಾಟೀಲ ನೇತೃತ್ವ . ಶಾಂತು ಅಂಜುಟಗಿ, ಭೀಮರಾವ ಗೌರ, ನಾಮದೇವ ಕಡಕೋಳ,ಭೀಮರಾಯ ಜಮಾದಾರ ಬಡದಾಳ,ಪ್ರಭಾವತಿ ಮೇತ್ರಿ, ರಮೇಶ ಶೆಟ್ಟಿ ,ಚಂದು ಬನ್ನೆಟ್ಟಿ,ಅಬ್ಬಾಸಲಿ ನಧಾಪ್, ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.


